ಉಡುಪಿ: ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ಡಿಸೆಂಬರ್ 29 ರಂದು ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ವಹಿಸಿ ಮಾತನಾಡಿದ ಅವರು ಮಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ಅತ್ಯಂತ ಹೇಯ ಪದ್ಧತಿಯಾಗಿದೆ. ಈ ಕೆಲಸವನ್ನು ಮಾಡದ ಹಾಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಬೀದಿ ನಾಟಕ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಬಗ್ಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಯೋಜಿಸಬೇಕು. ಶೌಚಾಲಯಗಳ ನಿರ್ವಹಣೆಗೆ ಸಕ್ಕಿಂಗ್ ಯಂತ್ರಗಳನ್ನು ಬಳಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆಯನ್ನು ಮಾಡಲಾಗಿದ್ದು, ಇದುವರೆಗೆ ಯಾರೂ ಪತ್ತೆಯಾಗಿರುವುದಿಲ್ಲ. ಯಾರಾದರೂ ಮಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯವನ್ನು ನಿರ್ವಹಿಸುತ್ತಿದ್ದಲ್ಲಿ ಅಂತವರ ವಿವರಗಳನ್ನು ಸಂಗ್ರಹಿಸಿ, ಅವರಿಗೆ ಸೂಕ್ತ ಪುನರ್ವಸತಿ ಸೌಲಭ್ಯಗಳನ್ನು
ಒದಗಿಸುವಂತೆ ಹಾಗೂ ಅತಂಹ ವ್ಯಕ್ತಿಗಳಿಗೆ ಸಕ್ಕಿಂಗ್ ವಾಹನಗಳನ್ನು ಖರೀದಿಸಲು ಧನಸಹಾಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ ಮಾತನಾಡಿ ಕೊಂಕಣ ರೈಲ್ವೆಯಲ್ಲಿ ಯಾವುದೇ ಮಾನ್ಯುಯಲ್ ಸ್ಕ್ಯಾವೆಂಜರ್ ಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಫಾಯಿ ಕರ್ಮಚಾರಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸಮವಸ್ತ್ರ, 2 ಡೋಸ್ ಕೋವಿಡ್ ಲಸಿಕೆ ಹಾಗೂ ಎಲ್ಲಾ ರೀತಿಯ ಅಗತ್ಯ ಸುರಕ್ಷಾ ಉಪಕರಣಗಳನ್ನು ಒದಗಿಸಲಾಗಿದೆ ಎಂದು
ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಎಎಸ್ಪಿ ಕುಮಾರ ಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.