ಉಡುಪಿ: ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಅವರುಗಳಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸಲು ಸಂಪೂರ್ಣ ಬಳಕೆ ಮಾಡಬೇಕು. ಸರ್ಕಾರದಿಂದ ಪ.ಜಾತಿ ಪಂಗಡದವರ ಮನೆಗೆ ಉಚಿತವಾಗಿ ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಕೆಲವೊಮ್ಮೆ ಫಲಾನುಭವಿಗಳಿಗೆ ಇಂತಹ ಯೋಜನೆಯ ಮಾಹಿತಿಯು ಲಭ್ಯವಿರದೇ ಅರ್ಜಿಯನ್ನು ಹಾಕಿರುವುದಿಲ್ಲ. ಇಂತಹವರನ್ನು ಗ್ರಾಮ ಪಂಚಾಯತ್‌ವಾರು ಗುರುತಿಸುವುದರೊಂದಿಗೆ ಅವರಿಗೆ ಯೋಜನೆಯ ಲಾಭ ಸಿಗುವಂತೆ ಮಾಡಬೇಕು. ವಿದ್ಯಾರ್ಥಿವೇತನಕೆ ಅರ್ಜಿ ಸಲ್ಲಿಸಿರುವಂತಹ ಪ.ಜಾತಿ ಹಾಗೂ ಪಂಗಡದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸೌಲಭ್ಯ ಸಿಗಬೇಕು. ಒಂದು ವೇಳೆ ತಾಂತ್ರಿಕ ಕಾರಣಗಳಿಂದ ಗೊಂದಲ ಉಂಟಾದರೆ ಸಂಬಂದಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಿ, ಮಂಜೂರು ಮಾಡಬೇಕು ಎಂದರು. ಸಚಿವರು ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳಿಂದ ಸರ್ಕಾರ ನಿಗಧಿಪಡಿಸಿದ ಗುರಿ, ಇಲ್ಲಿಯವರೆಗೆ ಮಾಡಿದ ಭೌತಿಕ ಮತ್ತು ಆರ್ಥಿಕ ಸಾಧನೆಯ ಮಾಹಿತಿಯನ್ನು ಪಡೆದರು. ಮಾರ್ಚ್ ಅಂತ್ಯದೊಳಗೆ ಎಲ್ಲಾ ಇಲಾಖೆಗಳು ತಮಗೆ ನೀಡಿದ ಸಂಪೂರ್ಣ ಕೆಲಸವನ್ನು ಸಾಧಿಸಬೇಕು ಎಂದು ಸೂಚನೆ ನೀಡಿದರು.
ಉಡುಪಿ ಶಾಸಕ ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ರಾಜ್ಯ ಎಸ್.ಸಿ.ಪಿ – ಟಿ.ಎಸ್.ಪಿ ಕೋಶದ ನಿರ್ದೇಶಕಿ ಊರ್ಮಿಳಾ, ಹಿಂದುಳಿದ ವರ್ಗಗಳ ಇಲಾಖೆಯ ಅಪರ ನಿರ್ದೇಶಕ ಪ್ರದೀಪ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.