ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆಯ್ಕೆಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಮಾಡಿರುವ ತಪ್ಪುಗಳನ್ನು ಸರಿಪಡಿಸಲು ಫೆ.13ರವರೆಗೆ ಸಮಯ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಅತಿಥಿ ಉಪನ್ಯಾಸಕರ ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಮೊದಲ ಸುತ್ತಿನ ಕೌನ್ಸೆಲಿಂಗ್ ಮುಗಿದಿದ್ದು, ಆಯ್ಕೆಯಾಗಿರುವ ಬಹುತೇಕರು ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ ಕೆಲವರು ಅರ್ಜಿ ಸಲ್ಲಿಸುವಾಗ ಸೇವಾ ಅನುಭವ ವಿವರ ಸಹಿತ ಪಿಹೆಚ್‌ಡಿ/ಎಂಫಿಲ್ ಪದವಿಗೆ ಸಂಬಂಧಿಸಿದ ವಿವರಗಳನ್ನು ತಪ್ಪಾಗಿ ತುಂಬಿದ್ದು, ಇವುಗಳನ್ನು ಸರಿಪಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅವರಿಗೆ ಎರಡು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದರು.
ಇನ್ನು, ಈ ಬಾರಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ವಾಸ್ತವ ಮಾಹಿತಿ ಮಾತ್ರ ಒದಗಿಸಬೇಕು. ಒಂದು ವೇಳೆ ವಾಸ್ತವ ಮಾಹಿತಿಯನ್ನು ಮರೆಮಾಚಿ ಪುನಃ ತಪ್ಪು ಮಾಹಿತಿ ನೀಡಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.