ಬೆಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗುತ್ತದೆ ಎಂದು ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗುತ್ತದೆ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಪ್ರಸ್ತುತ ತರಗತಿಗಳು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳು ಬೇಕಾಗುತ್ತವೆ. ಇವುಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಹೀಗಿರುವಾಗ ನಿಷೇಧ ಮಾಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಇಂತಹ ಸುದ್ದಿಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ಹಿಂದಿನಂತೆ ಮೊಬೈಲ್ ಬಳಕೆ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ.