ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಶಿವಪ್ಪ (32) ಎಂದು ಗುರುತಿಸಲಾಗಿದೆ. ಅವರು ಬಲ ಭಾಗದ ಸರ್ವೀಸ್ ರಸ್ತೆಯಿಂದ ಎಡ ಭಾಗದ ಸರ್ವೀಸ್ ರಸ್ತೆಗೆ ಬರಲೆಂದು ರಸ್ತೆ ದಾಟುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಶಿವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ವಲಸೆ ಕೂಲಿ ಕಾರ್ಮಿಕನಾಗಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದವರೆನ್ನಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿ ದೀಪ ಅಳವಡಿಸದೆ ಇರುವುದು ಹಾಗೂ ನಗರ ಪ್ರವೇಶಕ್ಕೆ ಅವಕಾಶ ನೀಡದೆ ಇರುವುದೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ