ಉಡುಪಿ: ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಘುಪತಿ ಭಟ್ ಜಿಲ್ಲೆಯಲ್ಲಿ 4 ದಿನಗಳಲ್ಲಿ 15 – 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ವರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು 96.3% ಹಾಗೂ ಎರಡು ಡೋಸ್‌ಗಳನ್ನು 84.3% ನೀಡಲಾಗಿದೆ. 15 – 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸ್ವಲ್ಪ ಸ್ವಲ್ಪವೇ ಹೆಚ್ಚಾಗುತ್ತಿದ್ದು, ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವುದರ ಜೊತೆಗೆ ಕೊರೋನಾ ನಿಯಮಗಳನ್ನು ಪಾಲಿಸಬೇಕು ಎಂದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಕ್ಕಳು ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ ಸಿಗುವುದರ ಜೊತೆಗೆ ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತದೆ. ಸರ್ಕಾರ ಸೂಚಿಸುವ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ಕೊರೋನಾ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. 2 ಡೋಸ್ ಲಸಿಕೆಯನ್ನು ಕಡ್ಡಾಯವಾಗಿ
ಪಡೆಯಬೇಕು. ಹಾಗೂ ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನುಸೂಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ, ನಾಗಭೂಷಣ ಉಡುಪ ಸ್ವಾಗತಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ವಂದಿಸಿದರು.