ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ನ ಹಾವಳಿ ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಳಿತವನ್ನು ಕಾಣುತ್ತಿದೆ. ಗುರುವಾರದ ಕೊರೊನಾ ಪ್ರಕರಣಗಳಿಗೆ ಹೋಲಿಸಿದರೆ ಶುಕ್ರವಾರ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 3,47,254 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 3,85,66,027ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.
ದೇಶದಲ್ಲಿ ಒಂದೇ ದಿನ 703 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಸೋಂಕಿನಿಂದಾಗಿ ಸಾವಿಗೀಡಾದವರ ಸಂಖ್ಯೆ 4,88,422ಕ್ಕೆ ಏರಿಕೆಯಾಗಿದೆ. ಇನ್ನು, 2,51,777ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,60,58,806ಕ್ಕೆ ಏರಿಕೆಯಾಗಿದೆ. ಇದೀಗ ದೇಶದಲ್ಲಿ 20,18,825 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ದರ ಶೇ.17.94ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ ನಿನ್ನೆಯ ಕೋವಿಡ್ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಇಂದು 29,722 ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯಗಳ ಪೈಕಿ ಮೊದಲ 5 ಸ್ಥಾನದಲ್ಲಿ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ ರಾಜ್ಯಗಳಿದ್ದು, ಕೊರೊನಾ ತಡೆಗೆ ಈ ರಾಜ್ಯಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.