ಮಂಗಳೂರು: ಇಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು 6.27 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿ ದುಬೈನಿಂದ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ಈತನನ್ನು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಲಿಪ್ ಸ್ಟಿಕ್ ಪೆನ್ಸಿಲ್ ಒಳಗೆ ಪೌಡರ್ ರೂಪದಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ತಕ್ಷಣ ಈತನನ್ನು ಅಧಿಕಾರಿಗಳು ಬಂಧಿಸಿದ್ದು, 24 ಕ್ಯಾರೆಟ್ ನ 127 ಗ್ರಾಂ ತೂಕದ 6.27 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.